ಮಹಾರಾಷ್ಟ್ರದ ಪುಣೆ ಜಿಲ್ಲೆಯ ಭೋರ್ ತಾಲೂಕಿನಲ್ಲಿ ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಘೋರ ಘಟನೆಯೊಂದು ನಡೆದಿದೆ. 65 ವರ್ಷದ ವೃದ್ಧನೊಬ್ಬ ಕೇವಲ ನಾಲ್ಕು ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರ ಎಸಗಿ, ನಂತರ ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಿರುವ ಕೃತ್ಯ ಬೆಳಕಿಗೆ ಬಂದಿದೆ.
ಈ ಘಟನೆಯು ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದ್ದು, ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.
ಬಾಲಕಿಯು ಮಧ್ಯಾಹ್ನದ ಸಮಯದಲ್ಲಿ ನಾಪತ್ತೆಯಾಗಿದ್ದಳು. ಆತಂಕಗೊಂಡ ಪೋಷಕರು ಸುತ್ತಮುತ್ತ ಹುಡುಕಾಟ ನಡೆಸಿದಾಗ ಬಾಲಕಿಯ ರಕ್ತಸಿಕ್ತ ಸ್ಥಿತಿಯಲ್ಲಿದ್ದ ಮೃತದೇಹ ಪತ್ತೆಯಾಗಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, 65 ವರ್ಷದ ಆರೋಪಿ ವೃದ್ಧನು ಮಗುವನ್ನು ಕರೆದೊಯ್ಯುತ್ತಿರುವುದು ಕಂಡುಬಂದಿದೆ. ಈ ಸಾಕ್ಷ್ಯದ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಹೆದ್ದಾರಿ ತಡೆದು ಗ್ರಾಮಸ್ಥರ ಪ್ರತಿಭಟನೆ
ನಸ್ರಾಪುರ ಭಾಗದಲ್ಲಿ ಈ ಘೋರ ಕೃತ್ಯದಿಂದ ರೊಚ್ಚಿಗೆದ್ದ ಗ್ರಾಮಸ್ಥರು ಪುಣೆ-ಬೆಂಗಳೂರು ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿದರು. ಆರೋಪಿ ಪೊಲೀಸ್ ವಶದಲ್ಲಿದ್ದರೂ ಸಹ, ಆತನಿಗೆ ತಕ್ಷಣವೇ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಶುಕ್ರವಾರ ಸಂಜೆ ಬಾಲಕಿಯ ಮೃತದೇಹವನ್ನು ಪೊಲೀಸ್ ಠಾಣೆಯ ಬಳಿ ತಂದಾಗ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಜನರು “ನಮಗೆ ನ್ಯಾಯ ಬೇಕು” ಎಂದು ಘೋಷಣೆ ಕೂಗಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಾಮಾಜಿಕ ಕಾರ್ಯಕರ್ತರೊಬ್ಬರು, “ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗಳು ನ್ಯಾಯ ನೀಡಲು ವಿಳಂಬ ಮಾಡುತ್ತಿರುವುದರಿಂದ ಸಾರ್ವಜನಿಕರಿಗೆ ಕಾನೂನಿನ ಮೇಲಿನ ನಂಬಿಕೆ ಕಡಿಮೆಯಾಗುತ್ತಿದೆ. ಇಂತಹ ಅಪರಾಧಗಳಿಗೆ ತಕ್ಷಣದ ಶಿಕ್ಷೆಯಾಗದಿದ್ದರೆ ಹಿಂಸಾಚಾರದ ಸರಣಿ ಮುಂದುವರಿಯುತ್ತದೆ” ಎಂದು ಆತಂಕ ವ್ಯಕ್ತಪಡಿಸಿದರು.
15 ದಿನಗಳಲ್ಲಿ ದೋಷಾರೋಪಣೆ ಪಟ್ಟಿ ಸಲ್ಲಿಕೆ
ಸ್ಥಳಕ್ಕೆ ಭೇಟಿ ನೀಡಿದ ಪುಣೆ ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಸಂದೀಪ್ ಸಿಂಗ್ ಗಿಲ್ ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದರು. “ಈ ಪ್ರಕರಣದ ತನಿಖೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದೆ. ಮುಂದಿನ 15 ದಿನಗಳ ಒಳಗಾಗಿ ಆರೋಪಿಯ ವಿರುದ್ಧ ದೋಷಾರೋಪಣೆ ಪಟ್ಟಿಯನ್ನು (Chargesheet) ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು. ಪ್ರಕರಣವನ್ನು ಫಾಸ್ಟ್ ಟ್ರ್ಯಾಕ್ ಕೋರ್ಟ್‌ನಲ್ಲಿ ನಡೆಸುವ ಮೂಲಕ ಆರೋಪಿಗೆ ಕಠಿಣ ಶಿಕ್ಷೆ ಕೊಡಿಸಲಾಗುವುದು” ಎಂದು ಭರವಸೆ ನೀಡಿದರು.
ಸಮಾಜದಲ್ಲಿ ಮಕ್ಕಳ ಮೇಲಿನ ಇಂತಹ ದೌರ್ಜನ್ಯಗಳು ಹೆಚ್ಚುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಏಪ್ರಿಲ್ 30ರಂದು ನೋಯ್ಡಾದಲ್ಲೂ ಇಂತಹುದೇ ಘಟನೆ ನಡೆದಿತ್ತು, ಅಲ್ಲಿ ವ್ಯಕ್ತಿಯೊಬ್ಬ ತನ್ನ ಸಾಕು ಮಗಳನ್ನೇ ಕೊಂದಿದ್ದನು. ಇಂತಹ ವಿಕೃತ ಮನಸ್ಥಿತಿಯ ಅಪರಾಧಿಗಳಿಗೆ ಕಾನೂನು ಕಠಿಣವಾಗಿ ದಂಡಿಸಬೇಕಿದೆ.
4 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕಲ್ಲಿನಿಂದ ಜಜ್ಜಿ ಕೊಂದ 65ರ ವೃದ್ಧ.!
WhatsApp Group
Join Now