ಬೆಂಗಳೂರು: ರಾಜ್ಯಾದ್ಯಂತ ಹಿಂಗಾರು ಮಳೆಯ ಅಬ್ಬರ ಅಧಿಕೃತವಾಗಿ ಆರಂಭವಾಗಿದ್ದು, ಮುಂದಿನ ಏಳು ದಿನಗಳ ಕಾಲ ಕರಾವಳಿ(Costal), ಮಲೆನಾಡು(Malnad) ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಬಿರುಗಾಳಿ ಮತ್ತು ಗುಡುಗು-ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ(Rain alert) ನೀಡಿದೆ.
ಹವಾಮಾನ ಮುನ್ನೆಚ್ಚರಿಕೆ ಹಾಗೂ ಮುನ್ಸೂಚನೆ
ಅಕ್ಟೋಬರ್ 20 ರಿಂದ ಅಕ್ಟೋಬರ್ 24 ರವರೆಗೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ತೀವ್ರ ಸ್ವರೂಪದ ಸಿಡಿಲು, ಮಿಂಚು ಹಾಗೂ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಅದೇ ರೀತಿ ಉತ್ತರ ಒಳನಾಡಿನಲ್ಲಿ ಅಕ್ಟೋಬರ್ 22 ರಿಂದ 24 ರವರೆಗೆ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್ 21 ರಿಂದ 24 ರವರೆಗೆ ಹಾಗೂ ಕರಾವಳಿ ಭಾಗದಲ್ಲಿ ಅಕ್ಟೋಬರ್ 20 ಮತ್ತು 24 ರಂದು ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆ ಸುರಿಯಲಿದೆ.
ದಿನವಾರು ಮಳೆಯ ವಿವರಣೆ
• ಅಕ್ಟೋಬರ್ 20: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವೆಡೆ ಭಾರಿ ಮಳೆಯಾಗಿದೆ. ಉತ್ತರ ಕನ್ನಡ, ಕೊಡಗು, ಮೈಸೂರು, ಮಂಡ್ಯ, ರಾಮನಗರ ಹಾಗೂ ಚಾಮರಾಜನಗರದಲ್ಲಿ ಸಾಧಾರಣ ಮಳೆ ವರದಿಯಾಗಿದ್ದು, ಬೆಂಗಳೂರು ನಗರ, ಗ್ರಾಮಾಂತರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಹಗುರ ಮಳೆಯಾಗಿದ್ದರೆ, ಉತ್ತರ ಒಳನಾಡಿನಲ್ಲಿ ಪ್ರಮುಖವಾಗಿ ಒಣಹವೆ ವರದಿಯಾಗಿದೆ.
• ಅಕ್ಟೋಬರ್ 21: ಚಾಮರಾಜನಗರ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಇದರೊಂದಿಗೆ ಬೆಂಗಳೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.
• ಅಕ್ಟೋಬರ್ 22 ಮತ್ತು 23: ಮಲೆನಾಡಿನ ಭಾಗಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಉತ್ತಮ ಮಳೆಯಾಗುವ ನಿರೀಕ್ಷೆಯಿದ್ದು, ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗಬಹುದು.
• ಅಕ್ಟೋಬರ್ 24: ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಹಲವೆಡೆ ಭಾರಿ ಮಳೆ ಸುರಿಯಲಿದ್ದು, ಉಳಿದ ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
• ಅಕ್ಟೋಬರ್ 25 ಮತ್ತು 26: ಈ ದಿನಗಳಿಂದ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯಲಿದೆ.
ರಾಜಧಾನಿ ಬೆಂಗಳೂರಿನ ಹವಾಮಾನ ಸ್ಥಿತಿ
ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ನಗರದ ಹಲವು ಭಾಗಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ನಗರದ ಗರಿಷ್ಠ ತಾಪಮಾನವು ಸುಮಾರು 30°C ಮತ್ತು ಕನಿಷ್ಠ ತಾಪಮಾನವು 21°C ಆಸುಪಾಸಿನಲ್ಲಿ ದಾಖಲಾಗಲಿದೆ.
• ಸಾರ್ವಜನಿಕರಿಗೆ ಮುನ್ನೆಚ್ಚರಿಕೆ: ಮಳೆಯ ಸಂದರ್ಭದಲ್ಲಿ ತೀವ್ರ ಸಿಡಿಲು ಮತ್ತು ಗುಡುಗು ಬರುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಹಾಗೂ ರೈತರು ಮರಗಳ ಕೆಳಗೆ ಅಥವಾ ಬಯಲು ಪ್ರದೇಶಗಳಲ್ಲಿ ನಿಲ್ಲದೆ, ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.
ರಾಜ್ಯದಲ್ಲಿ ಹಿಂಗಾರು ಮಳೆಯ ಅಬ್ಬರ ಶುರು : ಬೆಂಗಳೂರು, ಕರಾವಳಿ ಹಾಗೂ ಮಲೆನಾಡಿನ ವಿವಿಧ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ!
WhatsApp Group
Join Now