ದೇಶಾದ್ಯಂತ ಎದುರಾಗಿರುವ ಅನಿಲ ಸಿಲಿಂಡರ್ ಕೊರತೆಯಿಂದ ಹೋಟೆಲ್ ಉದ್ದಿಮೆಗಳು ಬೀಗ ಹಾಕುವ ಹಂತಕ್ಕೆ ತಲುಪಿದ್ದು, ಪರಿಸ್ಥಿತಿ ಹೀಗಿದ್ದರು ಕೇಂದ್ರ ಸರ್ಕಾರ ಮೌನಕ್ಕೆ ಶರಣಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ.
ಮಂಗಳವಾರ ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಲಿಂಡರ್ ಪೂರೈಕೆಯಲ್ಲಿನ ವ್ಯತ್ಯಯದಿಂದ ಹೋಟೆಲ್ ಅಸೋಸಿಯೇಷನ್‌ನವರು ಬಂದ್ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ. ಇದು ಕೇವಲ ಹೋಟೆಲ್‌ಗಳ ಮೇಲೆ ಮಾತ್ರವಲ್ಲದೆ, ರೋಗಿಗಳಿಗೆ ಆಹಾರ ಒದಗಿಸುವ ಆಸ್ಪತ್ರೆಗಳ ಮೇಲೂ ಗಂಭೀರ ಪರಿಣಾಮ ಬೀರಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಕೇಂದ್ರದ ವಿದೇಶಾಂಗ ನೀತಿ ಸಂಪೂರ್ಣ ಹಳ್ಳ ಹಿಡಿದಿದ್ದು, ಕಳೆದ 15 ದಿನಗಳಿಂದ ಈ ಸಮಸ್ಯೆ ಇದ್ದರೂ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವಲ್ಲಿ ವಿಫಲವಾಗಿದೆ. ಮನೆ ಬಳಕೆಗೆ ಮತ್ತು ಉದ್ದಿಮೆಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕಾದ ಸಂಸದರು ಯಾಕೆ ಈ ಬಗ್ಗೆ ಮೌನವಾಗಿದ್ದಾರೆ? ಎಂದು ಡಿಸಿಎಂ ಪ್ರಶ್ನಿಸಿದರು.
ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ
ಇದೇ ವೇಳೆ ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿರುವ ಬಗ್ಗೆ ಮಾತನಾಡಿದ ಡಿಸಿಎಂ ಡಿಕೆಶಿ, ಸೋನಿಯಾ ಗಾಂಧಿ ಅವರು ನನ್ನ ಮೇಲೆ ನಂಬಿಕೆ ಇಟ್ಟು ಈ ಜವಾಬ್ದಾರಿ ನೀಡಿದ್ದರು, ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ವಿಧಾನಸಭೆ ಕಲಾಪ ನಡೆಯುತ್ತಿರುವುದರಿಂದ ಇಂದು ಯಾವುದೇ ದೊಡ್ಡ ಸಮಾರಂಭ ಮಾಡದೆ, ಸಂಜೆ ಶಾಸಕರಿಗಾಗಿ ಔತಣಕೂಟ ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಸ್ಥಾನದ ಬಗ್ಗೆ ಹೇಳಿದ್ದೇನು..?
ಮುಂದಿನ ಮುಖ್ಯಮಂತ್ರಿ ಆಗಬೇಕೆಂಬ ಅಭಿಮಾನಿಗಳ ಒತ್ತಾಯದ ಬಗ್ಗೆ ಪ್ರಶ್ನಿಸಿದಾಗ, ನಾನು ಅದರ ಬಗ್ಗೆ ಮಾತನಾಡುವುದಿಲ್ಲ. ಪಕ್ಷ ನನಗೆ ಕೊಟ್ಟಿರುವ ಜವಾಬ್ದಾರಿಯನ್ನು ಶ್ರದ್ಧೆಯಿಂದ ನಿಭಾಯಿಸುತ್ತಿದ್ದೇನೆ ಎಂದು ಹೇಳುವ ಮೂಲಕ ಚರ್ಚೆಗೆ ಬ್ರೇಕ್ ಹಾಕಿದರು.
ಸಿಲಿಂಡರ್ ಕೊರತೆಯಿಂದ ಹೋಟೆಲ್ ಉದ್ಯಮಕ್ಕೆ ಹೊಡೆತ.. ಕೇಂದ್ರದ ಮೌನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಗರಂ
WhatsApp Group
Join Now