Sigandur Bridge : ಸಿಗಂದೂರು ಸೇತುವೆ ಉದ್ಘಾಟನಾ ಕಾರ್ಯಕ್ರಮದ ಆಹ್ವಾನ ವಿಚಾರದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿಲ್ಲ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸ್ಪಷ್ಟಪಡಿಸಿದ್ದಾರೆ.
ಶಿಷ್ಟಾಚಾರ ಉಲ್ಲಂಘನೆಗೆ ಸಂಬಂಧಪಟ್ಟ ಆರೋಪ ಹಾಗೂ ಸಿಎಂ ಪತ್ರದ ಹಿನ್ನೆಲೆಯಲ್ಲಿ ಟ್ವಿಟ್ ಮಾಡಿರುವ ಗಡ್ಕರಿ, ಜುಲೈ 11ರಂದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕೃತ ಆಹ್ವಾನವನ್ನು ನೀಡಲಾಗಿತ್ತು. ಒಂದೊಮ್ಮೆ ಪೂರ್ವ ನಿಗದಿತ ಕಾರ್ಯಕ್ರಮಗಳ ಸಮಸ್ಯೆ ಇದ್ದರೆ ವರ್ಚ್ಯುವಲ್ ಆಗಿಯಾದರೂ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕೆಂದು ಜು.12ರಂದು ಮತ್ತೊಂದು ಪತ್ರ ಬರೆದು ಕೋರಲಾಗಿತ್ತು. ಹೀಗಾಗಿ ಶಿಷ್ಟಾಚಾರ ಉಲ್ಲಂಘಿಸಲಾಗಿದೆ ಎಂಬ ಪ್ರಶ್ನೆ ಉದ್ಭವಿಸುವುದಿಲ್ಲ. ಕೇಂದ್ರ ಸರ್ಕಾರ ಗಣತಂತ್ರ ವ್ಯವಸ್ಥೆಯಲ್ಲಿ ನಂಬಿಕೆ ಹೊಂದಿದ್ದು, ಕೇಂದ್ರ-ರಾಜ್ಯಗಳ ಸೌಹಾರ್ದ ಸಂಬಂಧಕ್ಕೆ ಬದ್ಧವಾಗಿದೆ ಎಂದು ಹೇಳಿದ್ದಾರೆ.
ಶಿಷ್ಟಾಚಾರ ಲೋಪವೆಂದು ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
ಸಿಗಂದೂರು ಸೇತುವೆ ಉದ್ಘಾಟನೆ ಸಂದರ್ಭದಲ್ಲಿ ಸೃಷ್ಟಿಯಾಗಿರುವ “ಶಿಷ್ಟಾಚಾರ ಸಮರ’ ಈಗ ಮತ್ತೂಂದು ತಿರುವು ಪಡೆದುಕೊಂಡಿದ್ದು, ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.
ಈ ಸಂಬಂಧ ಕೇಂದ್ರ ಸಚಿವ ನಿತಿನ್ ಗಡ್ಕರಿ ಸ್ಪಷ್ಟನೆ ನೀಡಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ಪೂರ್ವ ನಿಗದಿತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಮುಂದೂಡುವಂತೆ ತಾವು ಮಾಡಿದ ಮನವಿಯ ಹೊರತಾಗಿಯೂ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಿದ ರೀತಿಯ ಬಗ್ಗೆ ತೀವ್ರ ಅಸಮಾಧಾನ ಪ್ರಕಟಿಸಿದ್ದಾರೆ. ಮಾತ್ರವಲ್ಲ ಕೇಂದ್ರ ಸರ್ಕಾರದ ಇಲಾಖೆಯ ಈ ಅಸಹಕಾರದ ಬಗ್ಗೆ ಅಧಿಕೃತ ವಿರೋಧವನ್ನೂ ಈ ಮೂಲಕ ದಾಖಲಿಸುತ್ತಿರುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ತಮ್ಮ ಪೂರ್ವ ನಿಗದಿತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಉದ್ಘಾಟನಾ ಸಮಾರಂಭವನ್ನು ಮುಂದೂಡುವಂತೆ ನಾನೇ ಖುದ್ದಾಗಿ ಕೇಂದ್ರ ಸಚಿವರಿಗೆ ತಿಳಿಸಿದ್ದೆ. ಮಾತ್ರವಲ್ಲ ಜು.11ರಂದು ಈ ಬಗ್ಗೆ ಪತ್ರವನ್ನೂ ಬರೆದಿದ್ದೆ. ಆದರೆ ಇದ್ಯಾವುದನ್ನೂ ಲೆಕ್ಕಿಸದೇ ಕಾರ್ಯಕ್ರಮವನ್ನು ನಡೆಸಿರುವುದು ಕೇಂದ್ರ ಸರ್ಕಾರದ ಇಲಾಖೆ ಎಸಗಿರುವ ಗಂಭೀರ ಶಿಷ್ಟಾಚಾರ ಲೋಪ ಎಂದು ಪರಿಗಣಿಸುತ್ತೇನೆ. ಜತೆಗೆ ಇನ್ನು ಮುಂದೆ ಇಂಥ ಘಟನೆಗಳು ಆಗದಂತೆ ಕೇಂದ್ರದ ಎಲ್ಲ ಇಲಾಖೆಗಳಿಗೆ ನಿರ್ದೇಶನ ನೀಡಬೇಕೆಂದು ಪತ್ರದಲ್ಲಿ ಪ್ರಧಾನಿಗೆ ಒತ್ತಾಯಿಸಿದ್ದಾರೆ.
ರಾಜ್ಯ ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಈ ರೀತಿ ಕಾರ್ಯಕ್ರಮವನ್ನು ಆಯೋಜಿಸುವುದು ನನ್ನ ವೈಯಕ್ತಿಕ ದೃಷ್ಟಿಯಿಂದ ಸರಿಯಲ್ಲ. ಜತೆಗೆ ಮಾಜಿ ಮುಖ್ಯಮಂತ್ರಿಗಳ ಹೆಸರನ್ನು ಡಿಸಿಎಂ, ಸಭಾಧ್ಯಕ್ಷ, ಸಭಾಪತಿಯ ಹೆಸರಿಗಿಂತ ಮೊದಲು ಮುದ್ರಿಸುವುದು ಕೂಡಾ ಶಿಷ್ಟಾಚಾರ ಅಲ್ಲ. ಇಂಥ ಘಟನೆಗಳು ಕೇಂದ್ರ- ರಾಜ್ಯ ಸಂಬಂಧವನ್ನು ಹದೆಗೆಡಿಸುವ ಜತೆಗೆ ಗಣತಂತ್ರ ವ್ಯವಸ್ಥೆಗೆ ಧಕ್ಕೆ ತರುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Sigandur Bridge : ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿಲ್ಲ : ನಿತಿನ್ ಗಡ್ಕರಿ
WhatsApp Group
Join Now