ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು, ಮಿಂಚು ಹಾಗೂ ಬಲವಾದ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ ಮತ್ತು ಕೊಡಗು ಸೇರಿದಂತೆ ಪ್ರಮುಖ 9 ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದ್ದು, ಈ ವೇಳೆ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಉತ್ತರ ಕರ್ನಾಟಕದ ಬೀದರ್, ರಾಯಚೂರು ಹಾಗೂ ಕಲಬುರಗಿ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ನಿರೀಕ್ಷೆಯಿದೆ.
ಇನ್ನೊಂದೆಡೆ, ಕರಾವಳಿ ಮತ್ತು ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಭಾವವಿದ್ದು, ದಿನವಿಡೀ ಬಿಸಿಲಿನ ಝಳ ಹೆಚ್ಚಿರಲಿದೆ. ಬೆಳಗಾವಿ, ಧಾರವಾಡ, ಹಾವೇರಿ, ವಿಜಯಪುರ, ಬಾಗಲಕೋಟೆ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣದೊಂದಿಗೆ ಬಿಸಿಲು ಇರಲಿದೆ. ಕರಾವಳಿಯಲ್ಲಿ ಮೀನುಗಾರರಿಗೆ ಯಾವುದೇ ವಿಶೇಷ ಎಚ್ಚರಿಕೆ ನೀಡಲಾಗಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಿಢೀರ್ ಉಂಟಾಗಿರುವ ಈ ಹವಾಮಾನ ವೈಪರೀತ್ಯದಿಂದಾಗಿ ವೈರಲ್ ಸೋಂಕುಗಳು ಹಾಗೂ ಸಾಂಕ್ರಾಮಿಕ ರೋಗಗಳು ಹೆಚ್ಚಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ. ರೋಗನಿರೋಧಕ ಶಕ್ತಿ ಕಾಯ್ದುಕೊಳ್ಳಲು ಕಾಯಿಸಿ ಆರಿಸಿದ ಬಿಸಿ ನೀರನ್ನು ಕುಡಿಯುವುದು, ಜನನಿಬಿಡ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದು ಸೂಕ್ತ ಎಂದು ವೈದ್ಯರು ಸೂಚಿಸಿದ್ದಾರೆ.
ರಾಜ್ಯದ ಈ 9 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
WhatsApp Group
Join Now